ಕರ್ನಾಟಕ ಸರ್ಕಾರವು ಶಿವಮೊಗ್ಗದ ಯುವ ಕಾಂಗ್ರೆಸ್ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ಸಂಘಟಕರಾದ ಹೆಚ್.ಪಿ. ಗಿರೀಶ್ ಅವರನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರೇ ಪದನಿಮಿತ ಅಧ್ಯಕ್ಷರಾಗಿದ್ದಾರೆ
ಕಾಂಗ್ರೆಸ್ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹೆಚ್.ಪಿ. ಗಿರೀಶ್ ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ.
ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳಿಂದ ಪ್ರೇರಿತರಾಗಿ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಅವರು, ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ.
ಜಿಲ್ಲೆ, ರಾಜ್ಯ ಮಟ್ಟದಲ್ಲಿ ಯುವ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ವಿನೂತನ ಹೋರಾಟಗಳು, ಜನಪರ ಕಾರ್ಯಕ್ರಮಗಳು ಮತ್ತು ಸಾಮಾಜಿಕ ಕಳಕಳಿಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿದ್ದಾರೆ. ಯುವಜನರ ಸಮಸ್ಯೆಗಳಿಗೆ ಧ್ವನಿಯಾಗಿ, ಸಾರ್ವಜನಿಕ ವಿಚಾರಗಳಲ್ಲಿ ನಿರಂತರವಾಗಿ ಹೋರಾಟ ನಡೆಸುವ ಮೂಲಕ ಪಕ್ಷದ ಸಂಘಟನೆಯಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದಾರೆ.
ಬಸವಣ್ಣನವರ ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಆಶಯಗಳನ್ನು ಪ್ರತಿಬಿಂಬಿಸುವ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯಲ್ಲಿ ನಿರ್ದೇಶಕರಾಗಿ ನೇಮಕಗೊಂಡಿರುವುದು ಅವರ ರಾಜಕೀಯ ಮತ್ತು ಸಾಮಾಜಿಕ ಸೇವೆಗೆ ಸಂದ ಗೌರವವಾಗಿದೆ.
ಈ ಹೊಸ ಜವಾಬ್ದಾರಿಯ ಮೂಲಕ ಬಸವ ಕಲ್ಯಾಣದ ಅಭಿವೃದ್ಧಿ ಹಾಗೂ ಮಂಡಳಿಯ ಆಶಯಗಳ ಈಡೇರಿಕೆಗೆ ಹೆಚ್.ಪಿ. ಗಿರೀಶ್ ಅವರು ಇನ್ನಷ್ಟು ಪರಿಣಾಮಕಾರಿಯಾಗಿ ಶ್ರಮಿಸಲಿ ಎಂಬುದು ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಆಶಯವಾಗಿದೆ.
ಹೆಚ್.ಪಿ. ಗಿರೀಶ್ ಅವರ ನೇಮಕಕ್ಕೆ ಪಕ್ಷತೀತಾವಾಗಿ ಶಿವಮೊಗ್ಗ ಜನತೆ ಮತ್ತು ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.
